Monday 4 January 2016

ಮಂಡ್ಯ: ಪ್ರತಿಯೊಬ್ಬ ಮನುಷ್ಯನಿಗೆ ಆರೋಗ್ಯ ಮುಖ್ಯವಾಗಿದೆ ಎಂದು ಮಂಡ್ಯದ ಚುಂಚನಗಿರಿ ಶಾಖಾ ಮಠದ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ ಹೇಳಿದರು.
ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಬಿ.ಹೊಸೂರು ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರಿಂದ ಹಾಗೂ ಶ್ರೀ ಸಾಯಿ ಟ್ರಾಕ್ಟರ್ ವತಿಯಿಂದ ಬಿ.ಹೊಸೂರಿನ ಪ್ರೌಢಶಾಲಾ ಆವರಣದಲ್ಲಿ ನಡೆದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಆರೋಗ್ಯದಿಂದಿರಲು ಧ್ಯಾನ, ಯೋಗ, ವ್ಯಾಯಾಮ, ಉತ್ತಮ ಆಹಾರ ಸೇವನೆ ಮಾಡುವ ಮೂಲಕ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಉತ್ತಮ ಆರೋಗ್ಯ ಇದ್ದರೆ ಜೀವನದಲ್ಲಿ ಏನು ಬೇಕಾದರೂ ಸಾಧನೆ ಮಾಡಬಹುದು ಎಂದರು.
ಮನುಷ್ಯನಿಗೆ ಕಾಯಿಲೆಗಳು ಸರ್ವೇ ಸಾಮಾನ್ಯವಾಗಿದ್ದು, ಅದನ್ನು ತಡೆಯಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಹೆಚ್ಚು ಹೆಚ್ಚು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ್ದರಿಂದ ಗ್ರಾಮೀಣ ಪ್ರದೇಶದ ಜನರು ಆರೋಗ್ಯದ ಕಡೆ ಗಮನಹರಿಸಬೇಕು. ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗಪಡಿಸಿಕೊಂಡು ಆರೋಗ್ಯವಂತರಾಗಿ ಬಾಳಿ ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 40ಕ್ಕೂ ಹೆಚ್ಚು ವೈದ್ಯರಿಂದ ಸುಮಾರು 350ಕ್ಕೂ ಹೆಚ್ಚು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ವೈದ್ಯರಾದ ಡಾ.ಗೋಪಿನಾಥ್, ಡಾ.ಶಿಲ್ಪಶ್ರೀ, ಸಾಯಿ ಟ್ರಾಕ್ಟರ್‍ನ ರವೀಂದ್ರ, ಉಷರಾಣಿರವೀಂದ್ರ, ಎಸ್.ಶಿವಕುಮಾರ್ ಆರಾಧ್ಯ, ಹೆಚ್.ಆರ್.ಅಶೋಕ್‍ಕುಮಾರ್, ಬಸವರಾಜು, ಬೋಜಮ್ಮ, ವಿಜಿಕುಮಾರ್ ಸೇರಿದಂತೆ ಇನ್ನಿತರರಿದ್ದರು.

No comments:

Post a Comment