Thursday 8 September 2016

ಬಂದ್ ಹಿನ್ನೆಲೆ: ಸೂಕ್ತ ಬಂದೋಬಸ್ತ್‍ಗೆ ಜಿಲ್ಲಾಧಿಕಾರಿಗಳ ಸೂಚನೆ

  ಬಂದ್ ಹಿನ್ನೆಲೆ: ಸೂಕ್ತ ಬಂದೋಬಸ್ತ್‍ಗೆ ಜಿಲ್ಲಾಧಿಕಾರಿಗಳ ಸೂಚನೆ
ಮೈಸೂರು, ಸೆ. 8. ವಿವಿಧ ಸಂಘಟನೆಗಳು ಸೆಪ್ಟೆಂಬರ್ 9 ರಂದು ರಾಜ್ಯ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಾದ ಡಿ. ರಂದೀಪ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಲಾಯಿತು.
ಬಂದ್ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಏರ್ಪಡಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪರ ಸಂಘಟನೆಗಳು ಹೆಚ್ಚು ಸಕ್ರಿಯವಾಗಿರುವ ಜಿಲ್ಲೆಯ ಕೆಲವು ಪ್ರದೇಶಗಳನ್ನು ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದೆ. ಆ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆಗೆ ಒತ್ತು ನೀಡಲಾಗಿದೆ ಎಂದು ಡಿ.ಸಿ.ಪಿ ಶೇಖರ್ ಅವರು ಹೇಳಿದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಕಚೇರಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಲಾಗುವುದು. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳಿಗೆ ಬಂದ್ ಹಿನ್ನೆಲೆಯಲ್ಲಿ ಭದ್ರತೆ ಅವಶ್ಯಕತೆ ಇದ್ದರೆ, ಅವರಿಗೂ ಭದ್ರತೆ ಒದಗಿಸಲಾಗುವುದು ಎಂದು ಶೇಖರ್ ಅವರು ಹೇಳಿದರು.
ಟಿ.ನರಸೀಪುರ, ನಂಜನಗೂಡು ತಾಲ್ಲೂಕುಗಳಲ್ಲಿ ನೀರಾವರಿ ಪ್ರದೇಶ ಇರುವುದರಿಂದ ಹೆಚ್ಚಿನ ಸಾರ್ವಜನಿಕರು ಬಂದ್‍ನಲ್ಲಿ ಭಾಗವಹಿಸಬಹುದು. ಇಲ್ಲಿನ ಹೆಚ್ಚಿನ ನಿಗಾವಹಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕಾಗುವುದೇ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಪರಿಸ್ಥಿತಿಯನ್ನು ಸಂಜೆ ವರೆಗೂ ಅವಲೋಕಿಸಿ, ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಪರಿಸ್ಥಿತಿ ನೋಡಿಕೊಂಡು, ಸಾರಿಗೆ ನಿUಮದ ಬಸ್ ಸಂಚಾರದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹೇಳಿದರು.
ಬಂದ್ ನೆಪದಲ್ಲಿ ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕರ ಆಸ್ತಿ-ಪಾಸ್ತಿಗೆ ಧಕ್ಕೆ ಉಂಟುಮಾಡಿದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕು. ಇಂತಹ ಅಹಿತಕರ ಘಟನೆಗಳು ನಡೆದರೆ ಸಾರ್ವಜನಿಕರು ಜಿಲ್ಲಾಧಿಕಾರಿಗಳ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ: 0821-2423800ಗೆ ಕರೆ ಮಾಡಿ, ತಿಳಿಸಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಟಿ. ವೆಂಕಟೇಶ್, ಮೈಸೂರು ಉಪ ವಿಭಾಗಾಧಿಕಾರಿಗಳಾದ ಸಿ.ಎಲ್. ಆನಂದ್, ಹುಣಸೂರು ಉಪವಿಭಾಗಾಧಿಕಾರಿ ಸೌಜನ್ಯ, ಮುಡಾ ಆಯುಕ್ತರಾದ ಡಾ. ಎಂ. ಮಹೇಶ್, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

No comments:

Post a Comment